ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೊನೆಗೂ ಕನ್ನಡಿಗರು ಸಿಡಿದೆದ್ದಿದ್ದಾರೆ. Xನಲ್ಲಿ #ನನ್ನತೆರಿಗೆನನ್ನಹಕ್ಕು #southtaxmovement ಹ್ಯಾಷ್‌ಟ್ಯಾಗ್ ಬಳಸಿ ಅಭಿಯಾನ ನಡೆಯುತ್ತಿದ್ದು, ಟ್ರೆಂಡಿಂಗ್‌ನಲ್ಲಿದೆ.
ಕರ್ನಾಟಕದಿಂದ ಸಂಗ್ರಹಿಸುತ್ತಿರುವ ತೆರಿಗೆ ಹಣವನ್ನು ಉತ್ತರ ಭಾರತದ ರಾಜ್ಯಗಳಿಗೆ ಬಹುಪಾಲು ಹಂಚಿಕೆ ಮಾಡುತ್ತಿದ್ದು, ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಲವು ವರ್ಷಗಳಿಂದ ಉತ್ತರ ಭಾರತದ ರಾಜ್ಯಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಖರ್ಚು ಮಾಡಿದ್ದರೂ ಅವು ಅಭಿವೃದ್ಧಿಯಾಗಿಲ್ಲ. ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಬಂದಿದೆ. ನಾವು ದುಡಿದು ಅವರನ್ನು ಸಾಕುವಂತಾಗಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೇರೆ ರಾಜ್ಯದ ಜನ ತಮ್ಮ ಜನಸಂಖ್ಯೆ ಕಡಿಮೆ ಮಾಡುವಲ್ಲಿ ವಿಫಲ ಆದ್ರೆ ಆ ಶಿಕ್ಷೆ ನಮ್ಮ ರಾಜ್ಯಕ್ಕೆ ಏಕೆ? 15ನೆಯ ಫೈನಾನ್ಸ್ ಕಮಿಷನ್ ರದ್ದು ಮಾಡಿ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಂಚುವುದನ್ನು ನಿಲ್ಲಿಸಿ. ನಮ್ಮ ರಾಜ್ಯದ ತೆರಿಗೆ ನಮ್ಮ ರಾಜ್ಯಕ್ಕೆ ಮಾತ್ರ ಬಳಕೆ ಆಗ್ಬೇಕು ಎಂದು ಟ್ವಿಟರ್ ಬಳಕೆದಾರ ಚೇತನ್ ಕನ್ನಡದವ ಎನ್ನುವವರು ಒತ್ತಾಯಿಸಿದ್ದಾರೆ.
ಕನ್ನಡಿಗ ಸಾಗರ್ ರವಿನಾಥ್ ಎನ್ನುವವರು, “ನಮ್ಮ ರಾಜ್ಯದಿಂದ ಸಂಸದರಾಗಿರುವ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕಕ್ಕೆ ಕೊಟ್ಟ ಕೊಡುಗೆ ಇದೇನಾ? ನಮ್ಮ ತೆರಿಗೆ ಹಣ ನಮ್ಮ ರಾಜ್ಯಕ್ಕೆ ಸರಿಯಾದ ಪಾಲು ಕೊಡಲಿ. ಉತ್ತರ ಭಾರತದವರನ್ನು ಸಾಕಿ ಸಲಹೋಕಾ ನಾವು ಒಕ್ಕೂಟ ಸೇರಿದ್ದು ಎಂದು ಪ್ರಶ್ನಿಸಿದ್ದಾರೆ.
ಈ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್. ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ Xನಲ್ಲಿ ಪೋಸ್ಟ್ ಮಾಡಿದ್ದಾರೆ.