ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಿ: ದಿನೇಶ್ ಗೂಳಿಗೌಡ 

Prasthutha|

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕರಾದ ಮಧು ಜಿ. ಮಾದೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ಅಖಂಡ ಕರ್ನಾಟಕದ ಅಭ್ಯುದಯಕ್ಕೆ ಶ್ರಮಿಸಿದವರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ಗಣನೀಯ. ಅವರು ಹಾಕಿಕೊಟ್ಟ ದೂರದೃಷ್ಟಿ ಯೋಜನೆಗಳಿಂದ ಇಂದು ನಾವೆಲ್ಲಾ ನಡೆಯುತ್ತಿದ್ದೇವೆ. ಅವರ ಅಂದಿನ ಅದೆಷ್ಟೋ ಕೊಡುಗೆಗಳು ಕೋಟ್ಯಂತರ ಜನರಿಗೆ ಲಾಭವಾಗಿದೆ ಎಂದು ಹೇಳಿರುವ ಶಾಸಕರು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದರ ಜೊತೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆದಿರುವ ಶಾಸಕರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ, ರಾಜ್ಯದ ಹೆಮ್ಮೆಯ ನಾಯಕರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಇಡಬೇಕೆಂದು ಕೋರಿದ್ದಾರೆ.

- Advertisement -

ಅಲ್ಲದೆ, ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್, ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ,

ರೇಷ್ಮೆ, ಯುವಜನಸೇವೆ ಮತ್ತು ಕ್ರೀಡಾ ಸಚಿವರಾದ ಕೆ.ಸಿ. ನಾರಾಯಣಗೌಡ ಅವರಿಗೂ ಶಾಸಕರಾದ ದಿನೇಶ್ ಗೂಳಿಗೌಡ ಹಾಗೂ ಮಧು ಜಿ. ಮಾದೇಗೌಡ ಅವರನ್ನು ಖುದ್ದು ಭೇಟಿಯಾಗಿ ಮನವಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಸಚಿವರಾದ ಕೆ. ಗೋಪಾಲಯ್ಯ ಹಾಗೂ ಕೆ.ಸಿ. ನಾರಾಯಣ ಗೌಡ ಅವರು, ಒಡೆಯರ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

Join Whatsapp