ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ED) ಆರೋಪಪಟ್ಟಿಯನ್ನು ಸಲ್ಲಿಸಿದೆ.
ಏಪ್ರಿಲ್ 9 ರಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಆರೋಪಿಗಳ ವಿರುದ್ಧದ ಆರೋಪವನ್ನು ಪರಿಗಣಿಸಲು ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 25 ಕ್ಕೆ ನಿಗದಿ ಪಡಿಸಿದ್ದಾರೆ.
ಆರೋಪಪಟ್ಟಿಯಲ್ಲಿ ರಾಹುಲ್, ಸೋನಿಯಾ ಗಾಂಧಿ ಅವರ ಜೊತೆಗೆ ಪಕ್ಷದ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರೂ ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಇದೇ ಮೊದಲ ಬಾರಿಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಕಾಂಗ್ರೆಸ್ ನಿಯಂತ್ರಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ ಸಂಬಂಧಿಸಿದ 661 ಕೋಟಿ ಮೌಲ್ಯ ಆಸ್ತಿಗಳನ್ನು ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಜಪ್ತಿ ಮಾಡಿತ್ತು. ಈ ಸಂಬಂಧ ನೋಟಿಸ್ ಕೂಡ ಜಾರಿ ಮಾಡಿತ್ತು.