ಕೊಪ್ಪಳ: ಲೋಕಸಭಾ ಚುನಾವಣೆಗೆ ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳದ ಗಂಗಾವತಿ ತಾಲೂಕಿನ ಪಂಪಾಸರೋವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 4 ರಿಂದ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಅವರನ್ನು ಗೆಲ್ಲಿಸಲು ಹಗಲು ರಾತ್ರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.