ಹುಬ್ಬಳ್ಳಿ: 2023 ರ ಕರ್ನಾಟಕ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪ್ರತಿ ಜಿಲ್ಲೆಯಲ್ಲೂ ಪಕ್ಷ ಭದ್ರ ಬುನಾದಿ ಹೊಂದಿರುವುದರಿಂದ ಸ್ವಂತ ಬಲದೊಂದಿಗೆ ಚುನಾವಣೆಯನ್ನು ಎದುರಿಸುತ್ತೇವೆ. ನಾವು ದುರ್ಬಲವಾಗಿರುವ ಕಡೆಗಳಲ್ಲಿ ಪಕ್ಷ ಸಂಘಟನೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ನಡುವೆ ಹುಬ್ಬಳ್ಳಿಯಲ್ಲಿ ಇಂದು ಆರಂಭಗೊಂಡ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮತ್ತು ಕೋರ್ ಕಮಿಟಿ ಸಭೆಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಮೇಲಿನಂತೆ ಪ್ರತಿಕ್ರಿಯಿಸಿದರು.