ಬೆಂಗಳೂರು: ಹಿಜಾಬ್ ಧರಿಸಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಮಾರ್ಚ್.28ರ ಸೋಮವಾರದಿಂದ SSLC ಪರೀಕ್ಷೆ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ್ ಮೂರ್ತಿ ಸುತ್ತೋಲೆ ಹೊರಡಿಸಿದ್ದಾರೆ.
1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.