ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ ನನ್ನ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಿಸಿತ್ತು. ಅದಕ್ಕೆ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿದೆ. ಇದರಲ್ಲಿ ಅಕ್ರಮ ಏನಿದೆ’ ಎಂದು ಪ್ರಶ್ನಿಸಿದರು.
ಪರಿಶಿಷ್ಟ ಜಾತಿಯ ಜವರ ಎಂಬುವವರು 1935ರಲ್ಲಿ ಸರ್ಕಾರಿ ಹರಾಜಿನಲ್ಲಿ ಸದರಿ ಜಮೀನನ್ನು ಖರೀದಿಸಿದ್ದರು. ಅವರಿಗೆ ಮೂರು ಜನ ಮಕ್ಕಳಿದ್ದರು. ಜವರ ಮೃತರಾದ ಬಳಿಕ ಕುಟುಂಬದ ಇತರ ಸದಸ್ಯರ ಒಪ್ಪಿಗೆ ಮೇರೆಗೆ ದೇವರಾಜು ಎಂಬ ಮಗನಿಗೆ ಜಮೀನಿನ ಖಾತೆ ವರ್ಗಾವಣೆ ಆಗಿತ್ತು. ಅವರಿಂದ ನನ್ನ ಪತ್ನಿಯ ಅಣ್ಣ ಮಲ್ಲಿಕಾರ್ಜುನಸ್ವಾಮಿ ಖರೀದಿಸಿದ್ದರು. ಇದು ಹರಾಜಿನಲ್ಲಿ ಖರೀದಿಸಿದ ಜಮೀನು ಆಗಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜಮೀನು ಖರೀದಿ ನಿಷೇಧ (ಪಿಟಿಸಿಎಲ್) ಕಾಯ್ದೆ ಅನ್ವಯ ಆಗುವುದಿಲ್ಲ ಎಂದರು.