ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಮಂಗಳೂರು ಸೇರಿದಂತೆ ಹಲವು ಕಡೆ ಅನೈತಿಕ ಪೊಲೀಸ್ ಗಿರಿ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದಿದ್ದಾರೆ.

- Advertisement -

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್

- Advertisement -

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಮಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸುತ್ತೇವೆ ಎಂದಿದ್ದಾರೆ.

ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.

ರಾಜ್ಯಕ್ಕೆ ಕೆಟ್ಟ ಹೆಸರು

ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ಅನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ.



Join Whatsapp