ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಒಮಿಕ್ರಾನ್ ಸಾಧಕ-ಬಾಧಕ ಕುರಿತು ತಜ್ಞರು ನೀಡಿರುವ ಸಲಹೆಯಂತೆ ಸದ್ಯದ ಪರಿಸ್ಥಿತಿಯಲ್ಲಿ ಶಾಲಾ-ಕಾಲೇಜುಗಳ ತರಗತಿಗಳನ್ನು ರದ್ದುಪಡಿಸುವ ಅಗತ್ಯವಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ತಿಂಗಳ ಅಂತ್ಯದ ವೇಳೆಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಇನ್ನೊಂದು ವಾರದೊಳಗಾಗಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಒಮಿಕ್ರಾನ್ ಸೋಂಕು ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.