ಹುಬ್ಬಳ್ಳಿ; ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಜ. 3ರಿಂದ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಲಸಿಕೆಗೆ ಚಾಲನೆ ನೀಡಲಿದ್ದಾರೆ. ಸಚಿವರು ಹಾಗೂ ಶಾಸಕರು ಸಹ ಸ್ಥಳೀಯವಾಗಿ ಮಕ್ಕಳ ಲಸಿಕಾ ಅಭಿಯಾನ ಉದ್ಘಾಟಿಸಲಿದ್ದಾರೆ ಎಂದರು.
ಸರ್ಕಾರಿ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಪಡೆದುಕೊಂಡೇ ಕಚೇರಿಗೆ ಬರಬೇಕು ಈಗಾಗಲೇ ಎಂದು ಸೂಚಿಸಲಾಗಿದೆ. ಪಡೆಯದವರಿಗೆ ಕಚೇರಿಗೆ ಪ್ರವೇಶವಿಲ್ಲ ಎಂದು ಸಹ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಸಿಬ್ಬಂದಿಗೂ ಈ ಮಾರ್ಗಸೂಚಿ ಪಾಲಿಸಲು ಸೂಚನೆ ನೀಡಲಾಗುವುದು ಎಂದರು.
ಬೂಸ್ಟರ್ ಡೋಸ್ ಅನ್ನು ಜ. 10ರ ನಂತರ ನೀಡಲಾಗುವುದು. ಆರಂಭದಲ್ಲಿ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ವಯೋಸಹಜ ಕಾಯಿಲೆಗಳಿರುವ ಅರವತ್ತು ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಹೇಳಿದರು.
ಒಮೈಕ್ರಾನ್ ತಡೆಗಾಗಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಂಕು ಹರಡುವಿಕೆ ಆಧರಿಸಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರೂ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.