ಬೆಂಗಳೂರು: ದೇಶದ 75ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಆಗಸ್ಟ್ 15ರಂದು ಮಧ್ಯಾಹ್ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿವರೆಗೂ ರಾಷ್ಟ್ರಧ್ವಜ ಹಿಡಿದು ‘ಫ್ರೀಡಂ ಮಾರ್ಚ್’ (ಸ್ವಾತಂತ್ರ್ಯ ನಡಿಗೆ) ಎಂಬ ಪಕ್ಷಾತೀತ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ , ಈ ಕಾರ್ಯಕ್ರಮದಲ್ಲಿ ಸುಮಾರು 75 ಸಾವಿರದಿಂದ 1 ಲಕ್ಷದವರೆಗೂ ಜನ ಸೇರಲಿದ್ದಾರೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಜನರು ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದು, ಯಾರು ಭಾಗವಹಿಸಲಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ.
ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಇದರಲ್ಲಿ ಎಲ್ಲ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಕ್ರೀಡಾಪಟುಗಳು, ಕಲಾವಿದರು ಸೇರಿದಂತೆ ಎಲ್ಲರೂ ಭಾಗವಹಿಸಬಹುದು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವವನ್ನು ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಆಚರಿಸಲು ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಈ ನಡಿಗೆಯನ್ನು ಒಂದು ಜಿಲ್ಲೆಯ ಎಷ್ಟು ತಾಲೂಕುಗಳಲ್ಲಿ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಕಾಂಗ್ರೆಸ್ ನಾಯಕರ ಇಚ್ಛೆಗೆ ಬಿಟ್ಟಿದ್ದೇವೆ.
ಆ.1 ರಿಂದ ಆ.10 ರವರೆಗೆ ಅಥವಾ ಅದಕ್ಕಿಂತ ಮುಂಚಿತವಾಗಿ ಬೇಕಾದರೂ ಈ ಪಾದಯಾತ್ರೆ ಮಾಡಬಹುದು. ಕೆಲವು ನಾಯಕರು ತಮ್ಮ ಕ್ಷೇತ್ರಗಳಲ್ಲೇ 75 ಕಿ.ಮೀ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದು, ಅದಕ್ಕೂ ಅನುಮತಿ ನೀಡಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ, ಈ ದೇಶಕ್ಕೆ ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ಕೊಡುಗೆಯಾಗಿ ನೀಡಿದ್ದು ಕಾಂಗ್ರೆಸ್. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಇದ್ದರೆ ಅವರನ್ನು ಅಥವಾ ಅವರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಯಾ ತಾಲೂಕಿನ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
‘ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು 75ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಕ್ಷದ ಚೌಕಟ್ಟಿನಲ್ಲಿ ನಡೆಸಲು ಅವರ ಹಿತೈಷಿಗಳು ತೀರ್ಮಾನಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಆಗಮಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ ಎಂರು.
ಎಡಿಜಿಪಿ ಅಮೃತ್ ಪೌಲ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಇದರಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ನಾವು ಆಗ್ರಹಿಸಿದ್ದೇವೆ. ಈವರೆಗೂ ಬಂಧಿತರಾಗಿರುವವರ ಹೇಳಿಕೆ, ಯಾರು ಯಾರನ್ನು ಬಿಡಿಸಿದ್ದಾರೆ, ಏನೆಲ್ಲಾ ಪ್ರಭಾವ ಬೀರಿದ್ದಾರೆ ಎಂಬುದು ನನಗೆ ಗೊತ್ತಿದೆ’ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಹವಾಲ ನಡೆಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ ಸಂಬಂಧ ಕೇಳಿದ ಪ್ರಶ್ನೆಗೆ, ‘ಬಿಜೆಪಿಯವರು ಮೊದಲು ಅವರ ಮುಖ್ಯಮಂತ್ರಿಗಳು, ಅವರ ದೊಡ್ಡ ನಾಯಕರ ಮುಖಕ್ಕೆ ಅಂಟಿರುವ ಮಸಿ ತೊಳೆದುಕೊಳ್ಳಲಿ’ ಎಂದು ತಿರುಗೇಟು ಕೊಟ್ಟರು.
ಜಮೀರ್ ಅಹ್ಮದ್ ಅವರ ಮನೆ ಮೇಲಿನ ಎಸಿಬಿ ದಾಳಿ ಮಾದರಿಯಲ್ಲಿ ಅಭಯ್ ಪಾಟೀಲ್ ಅವರ ಮೇಲೂ ಎಸಿಬಿ ದೂರು ದಾಖಲಿಸಿದ್ದು, ಅವರ ಮನೆ ಮೇಲೆ ದಾಳಿ ಮಾಡಲು ಸ್ಪೀಕರ್ ಅವರ ಅನುಮತಿ ಕೋರಲಾಗಿದೆ ಎಂಬುದನ್ನು ಗಮನಕ್ಕೆ ತಂದಾಗ ಕೇಳಿದ, ‘ನನ್ನ ಮನೆ ಮೇಲೆ ದಾಳಿ ಮಾಡುವಾಗ ಯಾರೂ ಸ್ಪೀಕರ್ ಬಳಿ ಅನುಮತಿ ಕೇಳಿರಲಿಲ್ಲ’ ಎಂದರು.