ನವದೆಹಲಿ: ಖ್ಯಾತ ಪತ್ರಕರ್ತ ಮುಹಮ್ಮದ್ ಝುಬೈರ್’ ಅವರನ್ನು ಧಾರ್ಮಿಕ ಭಾವನಕ್ಕೆ ಧಕ್ಕೆ ತಂದ ಆರೋಪದಲ್ಲಿ ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಝುಬೈರ್ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 295 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಲ್ಟ್’ನ್ಯೂಸ್ ಸಹ ಸಂಸ್ಥಾಪಕರಾದ ಮುಹಮ್ಮದ್ ಝುಬೇರ್ ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿದ್ದ ದೆಹಲಿ ಪೊಲೀಸರು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಝುಬೈರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ಝುಬೈರ್ ಗೆ ಹೈಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ ಪೊಲೀಸರು ಬೇರೊಂದು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆಯ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಝುಬೈರ್ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಕೆ.ಪಿ.ಎಸ್ ಮಲ್ಹೋತ್ರಾ ಬಂಧನವನ್ನು ಖಚಿತಪಡಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ಮುಂದೆ ಝುಬೈರ್’ರನ್ನು ಹಾಜರುಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಮುಖಂಡೆ ನೂಪುರ್ ಶರ್ಮಾ ಟಿವಿ ವಾಹಿನಿಯ ಚರ್ಚೆಯಲ್ಲಿ ಪಾಲ್ಗೊಂಡು ಪ್ರವಾದಿ ನಿಂದನೆಗೈದ ವೀಡಿಯೋವನ್ನು ಝುಬೈರ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು. ಇದರಿಂದ ಈ ವಿಷಯ ಜಾಗತಿಕವಾಗಿ ಗಮನ ಸೆಳೆದು ಮುಸ್ಲಿಮ್ ರಾಷ್ಟ್ರಗಳಲ್ಲಿ ಭಾರತದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬಳಿಕ ಸಂಘಪರಿವಾರ ಝುಬೈರ್ ವಿರುದ್ಧ ಕೆಂಗಣ್ಣು ಬೀರಿತ್ತು. ಝುಬೈರ್ ಅವರನ್ನು ಬಂಧಿಸುವಂತೆ ಸಂಘಪರಿವಾರದ ಕಾರ್ಯಕರ್ತರು ಒತ್ತಾಯಿಸಿದ್ದರು.