ಭುವನೇಶ್ವರ: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಒಡಿಸ್ಸಾ ಸಚಿವ ಸಂಪುಟದ ಎಲ್ಲಾ 20 ಸಚಿವರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಹೊಸ ಸಚಿವ ಸಂಪುಟ ರಚನೆಯ ಹಿನ್ನೆಲೆಯಲ್ಲಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಐದು ಬಾರಿ ಮುಖ್ಯಮಂತ್ರಿಯಾಗಿರುವ ನವೀನ್ ಪಟ್ನಾಯಕ್ ಅವರ ಅಧಿಕಾರಾವಧಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿದೆ.
ಭಾನುವಾರ ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ ನೂತನ ಸಚಿವ ಸಂಪುಟ ಸದಸ್ಯರ ಪ್ರಮಾಣವಚನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ 2024ನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಿರಿಯರನ್ನು ಸಂಪುಟದಿಂದ ಕೈಬಿಟ್ಟು ಹೊಸ ಯುವ ಮುಖಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. 147 ಸದಸ್ಯ ಬಲದ ಒಡಿಸ್ಸಾ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಡಿ 114 ಸ್ಥಾನಗಳನ್ನು ಗೆದ್ದುಗೊಂಡಿದೆ.