Home ಟಾಪ್ ಸುದ್ದಿಗಳು ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಪೊಲೀಸ್‌ ಗಸ್ತು ನಡೆಸಲು ಆದೇಶ

ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಪೊಲೀಸ್‌ ಗಸ್ತು ನಡೆಸಲು ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿ ದಿನ ಬೆಳಿಗ್ಗೆ 9ರಿಂದ 11ರ ವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 9ರ ವರೆಗೆ ಪೊಲೀಸ್ ಸಮವಸ್ತ್ರದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಗಸ್ತು ನಡೆಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಲೋಕ್‌ ಮೋಹನ್ ಕಟ್ಟುನಿಟ್ಟಿನ ಆದೇಶ ನೀಡಿದ್ಧಾರೆ.

ಎಲ್ಲ ವಲಯದ ಐಜಿಪಿಗಳು, ಡಿಐಜಿಪಿಗಳು ಹಾಗೂ ಹೆಚ್ಚುವರಿ ಪೊಲೀಸ್‌ ಆಯುಕ್ತರೂ ತಮ್ಮ ವ್ಯಾಪ್ತಿಯ ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ಕಾರ್ಯ ನಿರ್ವಹಣೆ ಪರಿಶೀಲಿಸಬೇಕು. ಅಲ್ಲದೇ ಪ್ರಮುಖ ಅಪರಾಧ ಪ್ರಕರಣಗಳು ನಡೆದಾಗ ಸ್ಥಳಕ್ಕೆ ಭೇಟಿ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ.

ಹೆದ್ದಾರಿಗಳಲ್ಲಿ ಗಸ್ತು ತಿರುಗುವ ವಾಹನಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಸುದ್ದಿಗಳ ವಿರುದ್ಧ ಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅಗತ್ಯವಿದ್ದರೆ ಸ್ವಯಂ ಪ್ರೇರಿತ ದೂರು ದಾಖಲಿಸಬೇಕು. ಜಿಲ್ಲಾ ಹಾಗೂ ನಗರಮಟ್ಟದ ಪೊಲೀಸ್‌ ಠಾಣೆಗಳಲ್ಲಿ ನಿಯಮಿತವಾಗಿ ಶಾಂತಿಸಭೆ ಹಾಗೂ ಜನಸ್ಪಂದನ ಸಭೆ ಆಯೋಜಿಸಬೇಕು. ಎಲ್ಲ ಸಮುದಾಯದ ಜತೆಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Join Whatsapp
Exit mobile version