ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ

Prasthutha|

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

- Advertisement -


ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾಗಿದ್ದಾರೆ.


ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ , ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ , ಸಮಾಜ ಕಲ್ಯಾಣ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ , ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ , ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು , ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಇಲ್ಲವೇ ಅವರ ಕುಟುಂಬಸ್ಥರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

- Advertisement -

ಉಡುಪಿಯಿಂದ ರಾಜಕೀಯ ಜೀವನ ಆರಂಭಿಸಿದ ಅವರು ನಂತರದ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಉನ್ನತ ಸ್ಥಾನಕ್ಕೆ ಏರಿದರು. ಉಡುಪಿ ನಗರ ಸಭಾ ಸದಸ್ಯ, ಸಂಸದ, ಪ್ರಧಾನಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ, ಕೃಷಿ ಸಲಹಾ ಸಮಿತಿ ಸದಸ್ಯ, ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯದ ಸಲಹಾ ಸಮಿತಿ ಸದಸ್ಯ ಸೇರಿದಂತೆ ಹಲವು ಹುದ್ದೆಗಳನ್ನು ಅವರು ನಿರ್ವಹಿಸಿದ್ದಾರೆ.

ಕೇಂದ್ರ ಯುವ ಜನ ಸೇವಾ ಮತ್ತು ಕ್ರೀಡಾ ಸಚಿವ, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.  2016ರಲ್ಲಿ ಸತತ ನಾಲ್ಕನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಪತ್ನಿ ಬೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಓಶನಿ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅವರು ಅಗಲಿದ್ದಾರೆ.

Join Whatsapp