ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿರುದ್ಧವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಜತೆಗಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ಚುನಾವಣೆ ಎಎಪಿ ಮತ್ತು ಬಿಜೆಪಿ ನಡುವಿನ ಹೋರಾಟವೇ ಹೊರತು ‘ಇಂಡಿಯಾ’ ಮೈತ್ರಿಕೂಟದ ಚುನಾವಣೆಯಲ್ಲ. ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್ ಪಿ) ಮತ್ತು ಶಿವಸೇನಾ (ಯುಬಿಟಿ) ನಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ಮೂಡಿಸಿದೆ’ ಎಂದು ಹೇಳಿದ್ದಾರೆ.
‘ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ (ಎಎಪಿ) ಬೆಂಬಲ ನೀಡುವುದಾಗಿ ಘೋಷಿಸಿರುವ ‘ಇಂಡಿಯಾ’ ಬಣದ ನಾಯಕರಾದ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರ ಬೆಂಬಲ ಮತ್ತು ಆಶೀರ್ವಾದಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ಬೆಂಬಲದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಶ್ವಾಸವಿದೆ’ ಎಂದು ಅವರು ತಿಳಿಸಿದ್ದಾರೆ.