ಹಾಸನ: ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ.
ಹೇಮಾವತಿ ಜಲಾಶಯದ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಏರಿಕೆಯಾಗಿದೆ. ಇದೀಗ ಜಲಾಶಯದಲ್ಲಿ ನೀರು ಸಂಗ್ರಹ ಆಗಿರುವುದರಿಂದ ಜಿಲ್ಲೆಯ ಜನರಲ್ಲಿ ಹರ್ಷ ಮೂಡಿದೆ.
ಹೆಚ್ಚು ನೀರು ಸಂಗ್ರಹವಾದರೆ ಮಾತ್ರ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ನಾಲೆಗಳಲ್ಲಿ ನೀರು ಹರಿಸಲಾಗುತ್ತದೆ. ಈಗಾಗಲೇ ಜಲಾಶಯದ ಭದ್ರತಾ ದೃಷ್ಟಿಯಿಂದ ಸ್ವಲ್ಪ ಪ್ರಮಾಣದ ನೀರನ್ನು ನಾಲೆ ಹಾಗೂ ನದಿಗೆ ಹರಿಬಿಡಲಾಗುತ್ತಿದೆ’ ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಎಂಜಿನಿಯರ್ ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶದಂತೆ ಹೇಮಾವತಿಯಿಂದ ಪ್ರತಿದಿನ ನಿರ್ದಿಷ್ಟಕ್ಯೂಸೆಕ್ಸ್ ನೀರು ಹರಿಬಿಡಲಾಗುತ್ತಿದೆ. ಒಳಹರಿವು ಹೆಚ್ಚಾದರೆ ಯಾವುದೇ ತೊಂದರೆ ಇಲ್ಲ. ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು ಭಾಗದಲ್ಲಿ ಮಳೆಯ ಪ್ರಮಾಣ ಇಳಿಕೆಯಾದಲ್ಲಿ ಒಳಹರಿವು ಕಡಿಮೆಯಾಗಲಿದೆ ಎಂದು ಎಂಜಿನಿಯರ್‌ಗಳು ಹೇಳಿದ್ದಾರೆ.