ಚಿಕ್ಕಮಗಳೂರು: ರಾಜ್ಯದಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನಿಂದಾಗಿ ಆಮ್ಲಜನಕದ ಕೊರತೆಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ವತಿಯಿಂದ ಆರಂಭಿಸಲಾದ ಆಮ್ಲಜನಕ ವ್ಯವಸ್ಥೆಯ ಬಸ್ ಸೇವೆ ಯಶಸ್ವಿಯಾಗಿದೆ. ಇದೀಗ ಈ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದ್ದು, ನಾಳೆ ಚಿಕ್ಕಮಗಳೂರಿನಲ್ಲಿ ಈ ಸೇವೆಯನ್ನು ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಎಲ್ಲ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ, ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಒದಗಿಸುವುದು ವಿಳಂಬವಾಗಿ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಉಚಿತವಾಗಿ ಬಸ್‌ನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಿರುವ ಈ ಕೆಎಸ್‌ಆರ್‌ಟಿಸಿ ಬಸ್ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಮ್ಲಜನಕ ಸಿಗದಿದ್ದರೆ ಬಸ್‌ನಲ್ಲಿಯೇ ತುರ್ತಾಗಿ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಏಕಕಾಲಕ್ಕೆ ಎಂಟು ಮಂದಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಆಮ್ಲಜನಕ ವ್ಯವಸ್ಥೆಯ ಬಸ್ ಸಜ್ಜುಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಬೆಳಿಗ್ಗೆ 11.30ಕ್ಕೆ ಆಮ್ಲಜನಕ ಸೌಕರ್ಯದ ಬಸ್‌ಗೆ ಚಾಲನೆ ನೀಡುವರು’ ಎಂದು ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ.ವಿರೇಶ್ ತಿಳಿಸಿದ್ದಾರೆ.