Home ಟಾಪ್ ಸುದ್ದಿಗಳು ಪಂಚಮಸಾಲಿ ಸಮುದಾಯ ಮೀಸಲಾತಿ ಪ್ರಕರಣ: ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್

ಪಂಚಮಸಾಲಿ ಸಮುದಾಯ ಮೀಸಲಾತಿ ಪ್ರಕರಣ: ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಆದೇಶಿಸಬೇಕು ಎಂದು ಕೋರಿರುವ ಅರ್ಜಿ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ಆದೇಶಿಸಿದೆ.


ಬೆಂಗಳೂರಿನ ಡಿ ಜಿ ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.


ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ವರದಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಸದ್ಯಕ್ಕೆ ರಾಜ್ಯ ಸರ್ಕಾರವು ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಪೀಠವು ಆದೇಶ ಮಾಡಿದ್ದು, ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ.


ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ ರವಿವರ್ಮ ಕುಮಾರ್ ಅವರು “ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನಮಗೆ ನೀಡಲಾಗಿಲ್ಲ. ಅಸಾಂವಿಧಾನಿಕ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಲು ಆದೇಶಿಸಬೇಕು” ಎಂದು ಕೋರಿದರು.

Join Whatsapp
Exit mobile version