ಬೆಳಗಾವಿ: ಸಂಗೋಪನಾ ಇಲಾಖೆಯಲ್ಲಿ ಖಾಲಿಯಿರುವ ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.
ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ನಾರಾಯಣ ಸ್ವಾಮಿ ಎಲ್.ಎನ್ ಕೇಳಿದ
ಪ್ರಶ್ನೆಗೆ ಉತ್ತರಿಸಿದ ಅವರು, 900 ಪಶು ವೈದ್ಯಾಧಿಕಾರಿಗಳ ಹುದ್ದೆಯನ್ನು ನೇರ ನೇಮಕಾತಿ ಮೂಲಕ ತುಂಬಲು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ಈ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿಯಿದ್ದು, ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ನುಡಿದರು.
ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪಶು ಸಂಜೀವಿನಿ ವಾಹನ ಸೌಲಭ್ಯವನ್ನು ಶೀಘ್ರವಾಗಿ ಒದಗಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇನ್ನೂ, ರಾಜ್ಯದಲ್ಲಿ ಕಾಲು ಬಾಯಿ ಜ್ವರ ಲಸಿಕೆಯನ್ನು 13 ಜಿಲ್ಲೆಗಳಲ್ಲಿ ಈಗಾಗಲೇ ಸಂಪೂರ್ಣವಾಗಿ ನೀಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಈ ತಿಂಗಳ ಅಗತ್ಯದ ಒಳಗಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಶಾಸಕ ಸುಕುಮಾರ್ ಶೆಟ್ಟಿ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.