ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಜನಸ್ಪಂದನಾ ಕಾರ್ಯಕ್ರಮ: ಶಾಸಕ ಬಂಡೆಪ್ಪ ಖಾಶೆಂಪುರ್

Prasthutha|

ಬೀದರ್: ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರ ಒದಗಿಸಿಕೊಡುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದ್ದಾರೆ.

- Advertisement -

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಟಗುಪ್ಪಾ ತಾಲೂಕಿನ ಮೀನಕೇರಾ ಗ್ರಾಮದ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ತಾಲೂಕು, ಹೋಬಳಿ, ಗ್ರಾಮ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದೇನೆ. ಈಗಾಗಲೇ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಸಭೆ ನಡೆಸಿದ್ದೇನೆ.

ಜನಸ್ಪಂದನಾ ಸಭೆಯ ಮೂಲಕ ತಾಲೂಕು, ಹೋಬಳಿ, ಗ್ರಾಮ ಮಟ್ಟದ ಅಧಿಕಾರಿಗಳನ್ನು ಗ್ರಾಮಗಳಿಗೆ ಕರೆಸಿ ಗ್ರಾಮಸ್ಥರ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು ಸ್ಥಳದಲ್ಲಿಯೇ ಆ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲಾಗುತ್ತಿದೆ ಎಂದು  ಖಾಶೆಂಪುರ್  ಹೇಳಿದರು.

- Advertisement -

ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆಯೊಂದಿಗೆ ಜನಸ್ಪಂದನಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೀನಕೇರಾದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರನ್ನು ಒದಗಿಸಿಕೊಡಬೇಕು. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶೌಚಾಲಯದ ಕೊರತೆಯಿದೆ. ವಿದ್ಯುತ್ ವ್ಯವಸ್ಥೆ ಸರಿಯಾಗಿಲ್ಲವೆಂದು ಗ್ರಾಮಸ್ಥರು ತಿಳಿಸಿದರು. ಕೂಡಲೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಕೊಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್  ಅಧಿಕಾರಿಗಳಿಗೆ ಸೂಚಿಸಿದರು.

ಮೀನಕೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಉದ್ಯೋಗ ಖಾತ್ರಿ ಕೆಲಸ ನೀಡುತ್ತಿಲ್ಲ. ನರೇಗಾ ಯೋಜನೆಯ ಜೂನಿಯರ್ ಇಂಜಿನಿಯರ್ ಗಳು ಗ್ರಾಮ ಪಂಚಾಯತಿ ಸದಸ್ಯರ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯತಿ ಸದಸ್ಯರು ಆಗ್ರಹಿಸಿದರು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಿ, ಕೂಡಲೇ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಉದ್ಯೋಗ ಖಾತ್ರಿ ಕೆಲಸ ನೀಡಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಜೆಸ್ಕಾಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಇಲಾಖೆಯಲ್ಲಿನ ಕೆಲಸ ಕಾರ್ಯಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ಶಿಂಧೆ, ನಾಡ ತಹಶೀಲ್ದಾರ್ ನಶೀರುದ್ಧೀನ್ ಶಾ, ಗ್ರಾಮ ಪಂಚಾಯತಿ ಅಧ್ಯಕ್ಷ ನಾಗಶೆಟ್ಟಿ,  ಉಪಾಧ್ಯಕ್ಷೆ ಸುವರ್ಣಾ, ಪಿಡಿಒ ರಮೇಶ್ ಬಿ ಮಂಟಾಳ್, ಮನ್ನಾಎಖೇಳ್ಳಿ ಪಿಎಸ್ಐ ಸುದರ್ಶನ್ ರೆಡ್ಡಿ, ಸಂತೋಷ ರಾಸೂರು, ಮಲ್ಲಪ್ಪ ಮನ್ನಾಎಖೇಳ್ಳಿ, ಧನರಾಜ್, ಸಂತೋಷ, ಮೋಷಿನ್, ವಿಜಯಲಕ್ಷ್ಮಿ, ಸುನೀತಾ, ಶಾರದಾಬಾಯಿ, ಪ್ರೇಮನಾಥ್, ಶ್ರೀಕಾಂತ್, ರಾಜಕುಮಾರ, ಶ್ರೀದೇವಿ, ಶಿವರಾಜ್, ಬಸವರಾಜ ಲಕ್ಷ್ಮಣ ಬುಡ್ತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ಮುಖಂಡರು ಇದ್ದರು.



Join Whatsapp