ಸನಾತನ ಧರ್ಮ ವಿವಾದ | ಪ್ರಧಾನಿ ಮೋದಿ ಹೇಳಿಕೆ ಪ್ರಚೋದನಕಾರಿ, ಸಂವಿಧಾನ ವಿರೋಧಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾಗಿದ್ದು, ಈ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ವಿಷಯ – ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ ಎಂದು ಹೇಳಿದ್ದಾರೆ.

- Advertisement -

ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

Join Whatsapp