ರಾಯಚೂರು: ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸುತ್ತಿರುವ ವೇಳೆ ಮಾಜಿ ಶಾಸಕ ಎ.ಪಾಪಾರೆಡ್ಡಿ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದ್ದು, ರೆಡ್ಡಿಯವರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಡಾ.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದಕ್ಕೆ ಅವಕಾಶ ನೀಡದ ಪೊಲೀಸರು ಪ್ರತಿಕೃತಿ ತೆರವು ಮಾಡಲು ಮುಂದಾಗಿದ್ದಾರೆ. ಇದರಿಂದ ಕೋಪಗೊಂಡ ಮಾಜಿ ಶಾಸಕ ಎ ಪಾಪಾರೆಡ್ಡಿ ಪಶ್ಚಿಮ ಠಾಣೆ ಪೊಲೀಸ್ ಕಾನ್ಸ್ ಟೇಬಲ್ ರಾಘವೇಂದ್ರ ಮೇಲೆ ಹಲ್ಲೆ ಮಾಡಿದ್ದಾರೆ.
ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು
ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ರಾಯಚೂರು ಪೊಲೀಸರು ಮಾಜಿ ಬಿಜೆಪಿ ಶಾಸಕ ಪಾಪರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬುಧವಾರ ಸಿವಿಲ್ ಡ್ರೆಸ್ ನಲ್ಲಿದ್ದ ಕಾನ್‌ಸ್ಟೆಬಲ್ ರಾಘವೇಂದ್ರ ಮೇಲೆ ಪಾಪರೆಡ್ಡಿ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಕ್ಷ್ಯವನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಅದರ ಅಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಯಚೂರು ಎಸ್ ಪಿ ನಿಖಿಲ್ ತಿಳಿಸಿದ್ದಾರೆ.