ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿ ಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕಾವೇರಿ ನೀರು ಹರಿಸುವ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು ರಾಜ್ಯ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಡಿಎಂಕೆ ಅಂಗಪಕ್ಷವಾಗಿರುವ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರಕಾರ ರಾಜ್ಯದ ಹಿತವನ್ನು ಬಲಿಗೊಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂ ಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ರಾಜ್ಯ ಸರಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ ಎಂದು ಅವರು ಕಿಡಿಕಾರಿದ್ದಾರೆ.