ಕಾಂತರಾಜ್ ಆಯೋಗದ ವರದಿ ಆಧಾರದಲ್ಲಿ ರಾಜಕೀಯ ಮೀಸಲಾತಿ ನೀಡಿ ಚುನಾವಣೆ ನಡೆಸಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯದಲ್ಲಿ  ಸಿದ್ಧವಾಗಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರ ಬರೆದಿರುವ ಅವರು,  ಸುಪ್ರೀಮ್ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಇದೊಂದೇ ಪರಿಹಾರ. ಈ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಸಮರೋಪಾದಿಯಲ್ಲಿ ಕಾನೂನು ಹೋರಾಟಕ್ಕೆ ತಯಾರಾಗಬೇಕು ಎಂದು ಸಲಹೆ ನೀಡಿದ್ದಾರೆ.

 “ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ  ಹಿಂದುಳಿದ ವರ್ಗಗಳ ಆಯೋಗದ ಮೂಲಕ  ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆಗೊಡ್ಡಿ  ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು” ಎಂದು 2010ರಲ್ಲಿಯೇ ಸುಪ್ರೀಮ್ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು. ಅದೇ ಆದೇಶವನ್ನು ಸುಪ್ರೀಮ್ ಕೋರ್ಟ್ ಪುನರುಚ್ಚರಿಸುತ್ತಾ ಬಂದಿದೆ.

- Advertisement -

ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಪರಿಷ್ಕೃತ ರಾಜಕೀಯ ಮೀಸಲಾತಿ ತಕ್ಷಣಕ್ಕೆ ಲಭ್ಯ ಇಲ್ಲದೆ ಹೋದರೆ ಅದಕ್ಕಾಗಿ ಕಾಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳನ್ನು ಸಾಮಾನ್ಯ ಕ್ಷೇತ್ರಗಳೆಂದು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತನ್ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ.

ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ತನ್ನ ಆದೇಶ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ. ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ಮಾಡಿಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುಪ್ರೀಮ್ ಕೋರ್ಟ್ ಹಿಂದಿನ ತನ್ನ ಆದೇಶಗಳಲ್ಲಿ  ‘’ ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ ಎರಡು ವಾರಗಳ ಅವಧಿಯೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು..” ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಈಗಿನ ಬಿಕ್ಕಟ್ಟಿಗೆ ಪರಿಹಾರದ ಮಾರ್ಗವನ್ನೂ ಸೂಚಿಸಿದೆ. ಈಗಿನ ಬಿಕ್ಕಟ್ಟಿಗೆ ಸುಪ್ರೀಮ್ ಕೋರ್ಟ್  ಪರಿಹಾರದ ಮಾರ್ಗ ಸೂಚಿಸಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ವೃಥಾ ಕಾಲಹರಣ ಮಾಡಿ ಅವಕಾಶವನ್ನು ಕಳೆದುಕೊಳ್ಳುತ್ತಿದೆ. ಈ ಬಗ್ಗೆ ಎರಡು ತಿಂಗಳುಗಳ ಹಿಂದೆಯೇ ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಎಚ್ಚರಿಸಿದ್ದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿಯೂ ಸಲಹೆಗಳನ್ನು ನೀಡಿದ್ದೆ. ಸುಪ್ರೀಮ್ ಕೋರ್ಟ್ ಆದೇಶದ ನಂತರ ಮಹಾರಾಷ್ಟ್ರ ಸರ್ಕಾರ ಅವಸರದಲ್ಲಿ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಪಡೆದ ಮಧ್ಯಂತರ ವರದಿಯನ್ನು ಸುಪ್ರೀಮ್ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ವೈಜ್ಞಾನಿಕವಾಗಿ ಸಂಗ್ರಹಿಸಿದ ಅಂಕಿ-ಅಂಶಗಳನ್ನು ಸಂಗ್ರಹಿಸದ ಮಧ್ಯಂತರ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಮ್ ಕೋರ್ಟ್ ಹೇಳಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕದ ಸ್ಥಿತಿ ಉಳಿದ ರಾಜ್ಯಗಳಿಗಿಂತ ಭಿನ್ನವಾಗಿದೆ. ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ. ಇಷ್ಟು ಮಾತ್ರವಲ್ಲ, ಸುಪ್ರೀಮ್ ಕೋರ್ಟ್ ಆದೇಶವನ್ನು ಪಾಲಿಸಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ  ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಈ ರೀತಿ ಮನೆಮನೆಗೆ ಹೋಗಿ ವೈಜ್ಞಾನಿಕವಾಗಿ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಸಮೀಕ್ಷೆಯನ್ನು ನಡೆಸಲಾಗಿಲ್ಲ ಎಂದವರು ತಿಳಿಸಿದ್ದಾರೆ.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ,ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ.  ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಮ್ ಕೋರ್ಟ್ ನೀಡಿರುವ ಆದೇಶದಿಂದ ಸಾಮಾಜಿಕ ನ್ಯಾಯದ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.  ಪರಿಸ್ಥಿತಿ ಕೈಮೀರಿಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಫಲವಾದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Join Whatsapp