ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ವಿಶೇಷ ತನಿಖಾ ದಳ (ಎಸ್ ಐಟಿ) ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ಸಂಸ್ಥೆ (SIT) ಶುಕ್ರವಾರ 2144 ಪುಟಗಳ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಪ್ರಜ್ವಲ್ ರೇವಣ್ಣ ಹೊಳೆ ನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಪೋನ್ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೆಂಗಳೂರಿನ ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ರೇವಣ್ಣ, ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್ ನಿಂದ ರೆಕಾರ್ಡ್ ಮಾಡಿಕೊಂಡಿದ್ದರು.
ಈ ವಿಚಾರವನ್ನು ಯಾರಿಗಾದರು ಹೇಳಿದರೆ ನಿನ್ನ (ಸಂತ್ರಸ್ಥೆ) ಪತಿಯನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಮತ್ತೆ ನಿನ್ನ ಮಗಳಿಗೂ ಇದೇ ಗತಿ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
‘ಪ್ರಜ್ವಲ್ ಅವರು ಲೈಂಗಿಕ ದೌರ್ಜನ್ಯ ಎಸಗಿ, ಸಂತ್ರಸ್ತೆಯ ಅರಿವಿಗೆ ಬಾರದಂತೆ ತನ್ನ ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಳ್ಳುತ್ತಿದ್ದರು. ಆ ಫೋಟೊಗಳು ಸಾಮಾಜಿಕ ಜಾಲತಾಣ ಹಾಗೂ ದೃಶ್ಯಮಾಧ್ಯಮ ದಲ್ಲಿ ಹರಿದಾಡಲು ಪ್ರಜ್ವಲ್ ಅವರೇ ಕಾರಣಕರ್ತರಾಗಿದ್ದಾರೆ’ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.