ಪ್ರಶಾಂತ್ ಕೊಲೆ ಪ್ರಕರಣ; ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ

Prasthutha|

ಹಾಸನ:  ನಗರಸಭೆ  ಸದಸ್ಯ, ಜೆಡಿಎಸ್ ಮುಖಂಡ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಗೆ ಸೂಚಿಸಲಾಗಿದ್ದು, ತನಿಖೆಯ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆ ಸದಸ್ಯ ಪ್ರಶಾಂತ್ ಅವರ ಕೊಲೆಯೂ ಎರಡು ಕುಟುಂಬಗಳ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಗೃಹ ಸಚಿವರೂ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಪ್ರಶಾಂತ್ ಅವರ ಸಾವಿನಿಂದ ಸಮಾಜಕ್ಕೆ ಬಹಳ ನಷ್ಟವಾಗಿದೆ‌. ಸಾವಿನಲ್ಲಿ‌ ರಾಜಕೀಯ ಮಾಡುವುದು ಸರಿಯಲ್ಲ. ಶಾಸಕ ಎಚ್.ಡಿ. ರೇವಣ್ಣ ಅವರ ಆರೋಪಗಳು ಕಪೋಲಕಲ್ಪಿತವಾಗಿದೆ.   ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಶಿಕ್ಷೆ ಆಗಲಿದೆ ಎಂದು ಭರವಸೆ ನೀಡಿದರು. 

- Advertisement -

ನಗರದಲ್ಲಿ ಪೊಲೀಸ್ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕಾರಣ ಈ ರೀತಿಯ ಘಟನೆ ನಡೆದಿದೆ ಎಂದು ವಿರೋಧಪಕ್ಷದವರು ಇಂತಹ ಹೇಳಿಕೆ ನೀಡುವುದು ಸಹಜ. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಸತ್ಯತೆ ಹೊರಬೀಳಲಿದ್ದು ನಂತರವಷ್ಟೆ ಸೂಕ್ತ ಉತ್ತರ ನೀಡುವುದಾಗಿ ಸಚಿವರು ತಿಳಿಸಿದರು.



Join Whatsapp