ಬೆಂಗಳೂರು: ದ.ಕ. ಜಿಲ್ಲೆಯ ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಎಂಬಾತನ ಹತ್ಯೆಗೆ ಸಂಬಂಧಿಸಿದಂತೆ 10 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಬಿಗಿಗೊಳಿಸಲಾಗಿದ್ದು, 10 ಜನರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ತನಿಖೆಯನ್ನು ಪಕ್ಕದ ಕೇರಳ ರಾಜ್ಯಕ್ಕೂ ವಿಸ್ತರಿಸಲಾಗುವುದೆಂದು ತಿಳಿಸಿದರು.
ಪ್ರವೀಣ್ ನೆಟ್ಟಾರು ಹತ್ಯೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಹತ್ಯೆ ನಡೆಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ಚುರುಕುಗೊಳಿಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚಿಸುವುದಾಗಿ ಅವರು ತಿಳಿಸಿದ್ದಾರೆ.