ಚಿತ್ರದುರ್ಗ: ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದ ವೈದ್ಯನನ್ನು ಸೇವೆಯಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವೈದ್ಯ ಡಾ.ಅಭಿಷೇಕ್ ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿತ್ತು. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, “ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಯಹ ಅಶಿಸ್ತುಗಳನ್ನು ನಾನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
“ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರೂ ಗಮನಹರಿಸಬೇಕು” ಎಂದು ಸಚಿವರು ತಿಳಿಸಿದ್ದಾರೆ.