ನವದೆಹಲಿ: ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಮುಖಂಡ, ಸಂಸದ ಸಂಜಯ್ ಸಿಂಗ್ ಮತ್ತು ಇತರ ಪ್ರತಿಭಟನಾಕಾರರನ್ನು ಸಿಬಿಐ ಪ್ರಧಾನ ಕಚೇರಿಯ ಹೊರಗೆ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಜಯ್ ಸಿಂಗ್ ಮತ್ತು ಇತರರು ಸಿಬಿಐ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿಯ ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ.
ಈ ಕಾರಣ ಅಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ಸಿಜಿಒ ಕಾಂಪ್ಲೆಕ್ಸ್’ನಲ್ಲಿ ಕಾನೂನುಬಾಹಿರವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದಕ್ಕಾಗಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಇತರ ಪ್ರತಿಭಟನಾಕಾರರೊಂದಿಗೆ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ತನ್ನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸೋಡಿಯಾ ಅವರಿಗೆ ಸಿಬಿಐ ಸೂಚಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡೋ ಸ್ಪಿರಿಟ್ ಮಾಲಕ ಸಮೀರ್ ಮಹೇಂದ್ರು, ಗುರುಗ್ರಾಮ್ ಮೂಲದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಅಮಿತ್ ಅರೋರಾ ಮತ್ತು ಇಂಡಿಯಾ ಅಹೆಡ್ ನ್ಯೂಸ್ ವ್ಯವಸ್ಥಾಪಕ ನಿರ್ದೇಶಕ ಮೂತಾ ಗೌತಮ್ ಸೇರಿದಂತೆ ಹಲವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.