ಕೊಡಗು: ಜಿಲ್ಲೆಯಲ್ಲಿ ಎರಡು ಪಕ್ಷಗಳ ಮೊಟ್ಟೆ ಜಗಳದಿಂದ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು ಮುಂಜಾಗ್ರತಾ ಕ್ರಮವಾಗಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಕುಶಾಲನಗರ, ವಿರಾಜಪೇಟೆ, ಸೋಮವಾರ ಪೇಟೆ, ಪೊನ್ನಂಪೇಟೆ ಭಾಗದಲ್ಲಿ ಕೂಡ ಪಥಸಂಚಲನ ಮಾಡಿ ನಿಮ್ಮ ಜೊತೆ ನಾವಿದ್ದೇವೆ. ಭಯ ಪಡುವ ಅಗತ್ಯ ಇಲ್ಲ ಎಂದು ಸಾರ್ವಜನಿಕರಿಗೆ ಧೈರ್ಯ ತುಂಬಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಒಳಗೊಳಗೆ ಕೆಂಡ ಕಾರುತ್ತಿವೆ. ಜಿಲ್ಲೆಯ ಜನರ ಹಿತದೃಷ್ಟಿಯಿಂದ ಎರಡು ಪಕ್ಷಗಳ ಗಲಾಟೆಗೆ ಬ್ರೇಕ್ ಹಾಕಿರುವ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ. ಸಭೆ, ಸಮಾರಂಭ, ಪ್ರತಿಭಟನೆ ನಡೆಯದಂತೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.
ಈ ಹಿಂದೆ ವಿಧಿಸಲಾಗಿದ್ದ ನಿಷೇಧಾಜ್ಞೆ ಇಂದು ಕೊನೆಯಾಗಬೇಕಿದ್ದು, ಮುಂಜಾಗ್ರತಾ ಕ್ರಮವಾಗಿ ಮುಂದುವರಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 20 ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಮಡಿಕೇರಿಯಲ್ಲೇ 16 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಕಿಡಿಗೇಡಿಗಳಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಈಗಾಗಲೇ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.