ಬೆಂಗಳೂರು: ರಾಜ್ಯದಲ್ಲಿರುವ ಸ್ಮಶಾನ ಮತ್ತು ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ ಮತ್ತು ಸಿಇಒ ಗಳ ಸಭೆಯಲ್ಲಿ ಈ ಸೂಚನೆ ನೀಡಿದರು.
ರಾಜ್ಯದಲ್ಲಿ ಯಾವುದೇ ಧರ್ಮ ಮತ್ತು ಜಾತಿಯವರು ಸ್ಮಶಾನ ಅಥವಾ ಖಬರ್ ಸ್ಥಾನಗಳಿಗೆ ಜಾಗ ಒದಗಿಸುವಂತೆ ಕೋರಿದ್ದರೆ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು. ಸರ್ಕಾರಿ ಜಾಗವನ್ನು ಒದಗಿಸಿ ಕೊಡಬೇಕು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಜಾಗ ಖರೀದಿಸಿ ಸಾರ್ವಜನಿಕ ಸ್ಮಶಾನ ಮತ್ತು ಖಬರ್ ಸ್ಥಾನಗಳಿಗೆ ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
ಅಲ್ಪಸಂಖ್ಯಾತರ ವಸತಿ ಶಾಲೆಗಳ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜು ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ 65 ಕಡೆಗಳಲ್ಲಿ ನಿವೇಶನ ಒದಗಿಸಲು ಹಾಗೂ ನಾಲ್ಕು ಕಡೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ವಕ್ಫ್ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ 400 ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ಒತ್ತುವರಿ ತೆರವು ಗೊಳಿಸಲು ಸೂಚಿಸಿದರು.