ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿದೆ.