ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕನಿಷ್ಠ 30 ಮಂದಿ ಗಾಯಗೊಂಡಿದ್ದು, 48 ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ.
ಭಾನುವಾರ ರಾತ್ರಿ ಪುಣೆಯ ನಾವಲೆ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡ ಟ್ರಕ್ ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದ್ದು, ಟ್ರಕ್ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪುಣೆ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್ ಡಿಎ) ಅಗ್ನಿಶಾಮಕ ದಳ ತಿಳಿಸಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.