ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಶ್ರೀನಾಥ್ ರೆಡ್ಡಿ ಮತ್ತು ಅದೇ ಠಾಣೆಯ ಪೊಲೀಸ್ ಪೇದೆ ಹರ್ಷಿತ್ನನ್ನು ಅಮಾನತುಗೊಳಿಸಲಾಗಿದೆ.
ದ.ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಅವರು ಘಟನೆ ಸಂಬಂಧ ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು. ಪುತ್ತೂರು ಠಾಣೆಯ ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ಪಿಎಸ್ಐ, ಪೊಲೀಸ್ ಸಿಬ್ಬಂದಿ ಹರ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದ್ದು ಬಂಟ್ವಾಳ ಡಿವೈಎಸ್ಪಿಗೆ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಲಾಗಿದೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಂದ ವಿಚಾರಣೆ ವರದಿ ಸಲ್ಲಿಕೆಯಾಗಿದೆ. ಆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ PSI ಹಾಗೂ ಸಿಬ್ಬಂದಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಆದೇಶ ಹೊರಡಿಸಿದ್ದಾರೆ.
ಪುತ್ತೂರು DySP ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮೇಲಾಧಿಕಾರಿಗೆ ವರದಿ ಸಲ್ಲಿಸಲು ಕ್ರಮಕ್ಕೆ ಸೂಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದರು.
ಮೇ 13ರಂದು ಹೊರಬಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್ ನಿಲ್ದಾಣದ ಬಳಿ ರಾತ್ರೋರಾತ್ರಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿತ್ತು. ಆ ಬ್ಯಾನರ್ಗೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದೆ. ಆರೋಪಿಗಳಿಗೆ ರಕ್ತ ಒಸರುವಷ್ಟು ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಗಳು ಕೇಳಿ ಬಂದಿದ್ದವು.