ಕೇಂದ್ರದ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ: ಸಹಕಾರಕ್ಕೆ ಸಿದ್ದರಾಮಯ್ಯ ಮನವಿ

Prasthutha|

- Advertisement -

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನ ನಡೆಸಲಾಗುತ್ತಿದ್ದು, ಇದರ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿದೆ. ಈ ಹೊತ್ತಿನಲ್ಲಿ ಕರ್ನಾಟಕವು ಸಾಗಿ ಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ‘ಸ್ವಾಭಿಮಾನ ಕನ್ನಡಿಗರರ ಪ್ರಶ್ನೆ’ ಅಭಿಯಾನ ನಡೆಯುತ್ತಿದೆ. ಈ ಅಭಿಯಾನವನ್ನು ಬೆಂಬಲಿಸಲು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

- Advertisement -

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ?. ನಿಮ್ಮ ನೇತೃತ್ವದ ಭಾರತೀಯ ಜನತಾ ಪಾರ್ಟಿ (BJP) ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?. ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಉತ್ತರ ಕೊಡಿ ಮೋದಿ ಅವರೇ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇಂದಿನಿಂದ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಹ್ಯಾಷ್‌ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಈ ಅಭಿಯಾನಕ್ಕೆ ಮಾಧ್ಯಮ ಮಿತ್ರರು ಹೆಚ್ಚಿನ ಪ್ರಚಾರ ನೀಡುವ ಮೂಲಕ ನಾಡಿನ ಪರವಾದ ಧ್ವನಿಗೆ ಧ್ವನಿಗೂಡಿಸಬೇಕೆಂದು ಕೋರಲಾಗಿದೆ.



Join Whatsapp