Home ಕರಾವಳಿ ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಸ್ಪರ್ಧೆ

ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಸ್ಪರ್ಧೆ

ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿದಾಗಲೂ ಭಟ್ ಬೇಸರಗೊಂಡಿದ್ದರು. ಆಗ ಪಕ್ಷದ ವರಿಷ್ಠರು ವಿಧಾನ ಪರಿಷತ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು.

ಬಳಿಕ ಮುನಿಸು ಮರೆತ ಭಟ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದರು. ಲೋಕಸಭೆ ಚುನಾವಣೆಯಲ್ಲೂ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಂಡ ಭಟ್ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದ್ದರು.

ಪದವೀಧರ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಿಲ್ಲವೆಂದು ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷಕ್ಕಾಗಿ ದುಡಿದ ನನ್ನಂತಹ ನಿಷ್ಠಾವಂತರಿಗೆ ಟಿಕೆಟ್ ಸಿಗುತ್ತಿಲ್ಲ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ, ವಿಧಾನಪರಿಷತ್ ಟಿಕೆಟ್ ನೀಡುತ್ತೇವೆ ಎಂದು ಹಿರಿಯರು ಹೇಳಿದ್ದರು. ಆದರೆ ಟಿಕೆಟ್ ನೀಡಿಲ್ಲ ಭೌಗೋಳಿಕವಾಗಿ ಕರಾವಳಿಯವರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ನೈರುತ್ಯ ಪದವೀಧರ ಚುನಾವಣೆಗೆ ನಾನು ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಚುನಾವಣೆಯಲ್ಲಿ ನಾನು ಗೆದ್ದರೂ ಬಿಜೆಪಿಯಲ್ಲಿಯೃ ಇರುತ್ತೇನೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.

Join Whatsapp
Exit mobile version