ಮಂಡ್ಯ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ‘ ಮಾದಕ ವ್ಯಸನಿ ಮತ್ತು ಪೆಡ್ಲರ್’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಮಾತ್ರವಲ್ಲ ರಾಹುಲ್ ವಿರುದ್ಧ ನಾಲಗೆ ಹರಿಯಬಿಟ್ಟ ನಳಿನ್ ಕುಮಾರ್ ಕಟೀಲ್ ಬಹಿರಂಗ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿರೋಧಿಸಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನಳಿನ್ ಅವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಅವರು ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಮಾತ್ರವಲ್ಲ ನಳಿನ್ ಕುಮಾರ್ ಅವರನ್ನು ಬಿಜೆಪಿ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಬೇಕೆಂದು ಪಟ್ಟುಹಿಡಿದಿದ್ದಾರೆ.
ಕಾಂಗ್ರೆಸ್ ಪಕ್ಷ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ‘ ಹೆಬ್ಬೆಟ್ಟು ಗಿರಾಕಿ’ ಎಂಬ ಹೇಳಿಕೆ ವಿವಾದವಾಗುತ್ತಿದ್ದಂತೆ ಟ್ವೀಟ್ ಅನ್ನು ಅಳಿಸಿ ಹಾಕಿತ್ತು. ಕಾಂಗ್ರೆಸ್ ನ ಹೇಳಿಕೆಯ ವಿರುದ್ಧ ತಿರುಗೇಟು ನೀಡುವ ಭರದಲ್ಲಿ ನಳಿನ್ ಕುಮಾರ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಮಧ್ಯೆ ಕಟೀಲ್ ಹೇಳಿಕೆಯನ್ನು ಖಂಡಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ “ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಕಟೀಲ್ ಅವರು ಇಂತಹ ಕೀಳು ಮಟ್ಟದ ಇಳಿಯಬಾರದು. ಈ ಮನಸ್ಥಿತಿಯ ವ್ಯಕ್ತಿ ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದರು.
ಆಡಳಿತರೂಢ ಬಿಜೆಪಿ ಆರ್ಥಿಕ ಮತ್ತು ನೈತಿಕ ಭ್ರಷ್ಟ ಪಕ್ಷ ಎಂದು ಅವರು ಆರೋಪಿಸಿದರು. ಬಿಜೆಪಿ ತನ್ನ ರಾಜಕೀಯ ಲಾಭಕೋಸ್ಕರ ದೇವರು ಮತ್ತು ಧರ್ಮದ ಹೆಸರನ್ನು ದುರ್ಬಳಕೆ ಮಾಡುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.
ಇತರ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವವರನ್ನು ಮುಖ್ಯಮಂತ್ರಿ ಬೊಮ್ಮಾಯಿ ನಿಯಂತ್ರಿಸಲಿ ಎಂದು ಒತ್ತಾಯಿಸಿದರು.