ನವದೆಹಲಿ: ಈ ಬಾರಿಯೂ ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗಿದೆ. ವಯನಾಡಿನ ಸಂಸದರಾಗಿರುವ ರಾಹುಲ್ ಗಾಂಧಿ ಇದೇ ಕ್ಷೇತ್ರದಲ್ಲಿ 2ನೇ ಬಾರಿಗೆ ಸ್ಪರ್ಧಿಸಲಿದ್ದಾರೆ.
ಕಳೆದ ಬಾರಿಯಂತೆ ವಯನಾಡಿನ ಜೊತೆ ಅಮೇಥಿಯಲ್ಲೂ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರಾ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಕಳೆದ ಬಾರಿ ರಾಹುಲ್ ಗಾಂಧಿ ವಯನಾಡಿನಲ್ಲಿ ಗೆಲುವು ಸಾಧಿಸಿದ್ದರೆ, ಅಮೇಥಿಯಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಕಂಡಿದ್ದರು.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಸೋನಿಯಾ ಗಾಂಧಿ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಭಾಗವಾಗಿರುವ ಇತರ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ರಾಹುಲ್ ಗಾಂಧಿಯವರು ವಿಡಿಯೋ ಕರೆಯ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.