Home ಟಾಪ್ ಸುದ್ದಿಗಳು ರಾಜಸ್ಥಾನ ಹಿಂಸಾಚಾರ: ನೂರಾರು ಮಂದಿಯ ಬಂಧನ; ಇಂಟರ್ ನೆಟ್ ಸ್ಥಗಿತ

ರಾಜಸ್ಥಾನ ಹಿಂಸಾಚಾರ: ನೂರಾರು ಮಂದಿಯ ಬಂಧನ; ಇಂಟರ್ ನೆಟ್ ಸ್ಥಗಿತ

ಜೋಧಪುರ: ರಾಜಸ್ಥಾನದ ಜೋಧಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.

ಗಲಭೆ ನಿಯಂತ್ರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹವಾ ಸಿಂಗ್ ಗುಮಾರಿಯಾ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ತಡೆಯುವ ನಿಟ್ಟಿನಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಜಿಲ್ಲೆಯಲ್ಲಿ ಈ ಹಿಂಸಾಚಾರ ಉಂಟಾಗಿರುವುದರಿಂದ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ.

ಈದ್ ಆಚರಣೆಯ ಪ್ರಯುಕ್ತ ಧಾರ್ಮಿಕ ಧ್ವಜ ಅಳವಡಿಕೆಗೆ ಸಂಬಂಧಿಸಿದಂತೆ ಜಾಲೋರಿ ಗೇಟ್ ಎಂಬಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಸಂದರ್ಭದಲ್ಲಿ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಇದರಿಂದ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ಹೇಳಲಾಗಿದೆ.

Join Whatsapp
Exit mobile version