ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಯ ಯಾವುದೇ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡದೆ ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆ ಅವರನ್ನು ತಕ್ಷಣವೇ ಕೋರ್ಟ್ಗೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.
ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಶ್ರೀ ಅವರ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೋರ್ಟ್ಗೆ ಮಾಹಿತಿ ನೀಡದೆ ಹೇಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರನ್ನು ಒಂದನೇ ಅಪರ ನ್ಯಾಯಾಲಯ ಪ್ರಶ್ನಿಸಿದ್ದು, 3 ಗಂಟೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಲೈಂಗಿಕ ದೌರ್ಜನ್ಯ ಸಂಬಂಧ ಇಂದಿನವರೆಗೆ ಮಾತ್ರ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿತ್ತು. ಅದರಂತೆ ಇಂದು ಮತ್ತೆ ಶ್ರೀಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಬೇಕಿತ್ತು. ಆದರೆ ಶ್ರೀಗಳನ್ನು ಆರೋಗ್ಯ ಸಮಸ್ಯೆ ಹಿನ್ನೆಲೆ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಹೆಚ್ಚಿನ ವಿಚಾರಣೆಗಾಗಿ ಶ್ರೀಗಳನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ. ಈ ವೇಳೆ ಕೋರ್ಟ್ ಆರೋಪಿ ಎಲ್ಲಿ ಎಂದು ಪೊಲೀಸರನ್ನು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಪೊಲೀಸರು, ಈಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದಿದ್ದಾರೆ. ಇದಕ್ಕೆ ಕೋರ್ಟ್, ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ ಹೇಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ ತಕ್ಷಣವೇ ಆರೋಪಿ ಹಾಜರಾಗಬೇಕು, ಇಲ್ಲವೇ ಮೆಡಿಕಲ್ ರಿಪೋರ್ಟ್ ತರುವಂತೆ ಸೂಚಿಸಿದೆ.