ಬೆಂಗಳೂರು: ಎನ್ ಇಪಿ ಕ್ರಾಂತಿಕಾರಕ ನೀತಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಅಳವಡಿಸುವ ಬಗ್ಗೆ ಮತ್ತೊಂದು ಸಮಿತಿ ರಚಿಸುತ್ತೇವೆ. ಎನ್ ಇಪಿ ಕುರಿತು ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಸ್ತುತ ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಈ ನೀತಿ ಪೂರಕವಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುವುದು. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಎಂಜಿನಿಯರ್ಗಳ ದಿನಾಚರಣೆ ಹಿನ್ನೆಲೆ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.