ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದು, ತಾನು ಮತ್ತೆ ಮುಖ್ಯಮಂತ್ರಿಯಾದರೆ ಯೋಜನೆಯನ್ನು ಹಿಂದೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಮತ್ತೆ ಸಿಎಂ ಆಗುತ್ತೇನೆ ಎಂಬ ವಿಶ್ವಾಸ ನನಗಿದೆ. ಅದು ಸಾಧ್ಯವಾದರೆ, ಜಿಲ್ಲೆಯು ತನ್ನ ಮೂಲ ಹೆಸರಾದ ರಾಮನಗರವನ್ನು ಮರಳಿ ಪಡೆಯುವುದನ್ನು ನಾನು ಖಚಿತಪಡಿಸುತ್ತೇನೆ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.
ರಾಮನಗರಕ್ಕೆ ‘ಬೆಂಗಳೂರು ದಕ್ಷಿಣ’ ಎಂದು ಹೆಸರಿಡುವುದು ಭಗವಾನ್ ರಾಮನಿಗೆ ಮಾಡಿದ ಅವಮಾನ ಎಂದು ಕುಮಾರಸ್ವಾಮಿ ಹೇಳಿದರು.
ರಾಮನಗರ ಎಂಬ ಹೆಸರಿಗೆ ಐತಿಹಾಸಿಕ ಮಹತ್ವವಿದೆ. ಜಿಲ್ಲೆಯ ಹೆಸರನ್ನು ಬದಲಾಯಿಸುವುದರಿಂದ ಅದರ ನಿವಾಸಿಗಳಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದನ್ನು ಉಪಮುಖ್ಯಮಂತ್ರಿ ವಿವರಿಸಬೇಕು. ಹೆಸರು ಬದಲಾಯಿಸುವ ಬದಲು ಜಿಲ್ಲೆಯ ಅಭಿವೃದ್ಧಿಯತ್ತ ಸರ್ಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.