ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್ ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಅಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಮತ್ತಷ್ಟು ಹೊಸ ತಿರುವು ನೀಡಿದಂತಾಗಿದೆ.
ಈ ಪಂಚಾಯತ್ ಗಳು ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ಸೇರಲು ನಿರಾಕ್ಷೇಪಣಾ ಪತ್ರ ನೀಡುವಂತೆ ಮನವಿ ಮಾಡಿದೆ. ಪಂಚಾಯತ್’ಗಳ ನಿರ್ಣಯದ ಪ್ರತಿ ಹಾಗೂ ಅರ್ಜಿ ತಮ್ಮ ಕಚೇರಿಗೆ ತಲುಪಿದ್ದು, ಅವುಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶಿಕ್ಷಣ ಮತ್ತು ಇತರ ಸೌಲಭ್ಯಗಳ ನೀಡುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ. ನಮ್ಮ ಗ್ರಾಮಗಳು ಯಾವುದೇ ಅಭಿವೃದ್ಧಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಆದರೆ ಗಡಿಯಾಚೆಗಿನ ಗ್ರಾಮಗಳನ್ನು ಕರ್ನಾಟಕ ಸರ್ಕಾರ ಅಭಿವೃದ್ಧಿಪಡಿಸಿದೆ ಎಂದು ಆರೋಪಿಸಿ ಅಕ್ಕಲಕೋಟ ತಾಲೂಕಿನ ಅಳ್ಗೆ ಹಾಗೂ ಸುತ್ತಲಿನ 10 ಗ್ರಾಮಗಳ ನಿವಾಸಿಗಳು ಇತ್ತೀಚೆಗೆ ಸೊಲ್ಲಾಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಮಧ್ಯೆ, ಆ ಗ್ರಾಮಗಳಲ್ಲಿ ನೆಲೆಸಿರುವ ಕೆಲವು ಕನ್ನಡಿಗರಿಗೆ ಮಹಾರಾಷ್ಟ್ರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಅವರಿಂದ ಪೂರ್ವಾನುಮತಿ ಪಡೆಯದೆ ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಗಡಿಯಲ್ಲಿ ಸುಮಾರು 60 ಹಳ್ಳಿಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುತ್ತಿವೆ. ಮುಖ್ಯಮಂತ್ರಿಗಳ ಭೇಟಿಗೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಶೀಘ್ರವೇ ಬೆಳಗಾವಿ ಡಿಸಿ, ಎಸ್ಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಕನ್ನಡದ ಹಿರಿಯ ಮುಖಂಡ ಅಶೋಕ ಚಂದರಗಿ ಹೇಳಿದ್ದಾರೆ.