Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ವಿರುದ್ಧ ಕುತಂತ್ರ ಮುಂದುವರಿಸಿದರೆ ದಂಗೆ ಏಳಬೇಕಾಗುತ್ತದೆ: ಒಕ್ಕೂಟ ಎಚ್ಚರಿಕೆ

ಸಿದ್ದರಾಮಯ್ಯ ವಿರುದ್ಧ ಕುತಂತ್ರ ಮುಂದುವರಿಸಿದರೆ ದಂಗೆ ಏಳಬೇಕಾಗುತ್ತದೆ: ಒಕ್ಕೂಟ ಎಚ್ಚರಿಕೆ

ಬೆಂಗಳೂರು: ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಯತ್ನವನ್ನು ಬಿಜೆಪಿ, ಜೆಡಿಎಸ್ ನಾಯಕರು ಮುಂದುವರಿಸಿದರೆ ದಂಗೆ ಏಳಬೇಕಾಗುತ್ತದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ, ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಅಧಿಕಾರ ಕಳೆದುಕೊಂಡಿದ್ದರಿಂದಾಗಿ ಒದ್ದಾಡುತ್ತಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರ ಮಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಇದ್ದರೆ ಅದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮ ಸಿಂಗ್ ಅಧಿಕಾರದಲ್ಲಿದ್ದಾಗ ಅವರ ವಿರುದ್ಧವೂ ಕುತಂತ್ರ ಮಾಡಲಾಗುತ್ತಿತ್ತು. ಆದರೆ ಈಗ ಶೋಷಿತ ಸಮುದಾಯ ಜಾಗೃತವಾಗಿದೆ ಎಂಬುದನ್ನು ನೆನಪಿನಲ್ಲಿಡಬೇಕು. ಬಿಜೆಪಿ-ಜೆಡಿಎಸ್‌ ನಾಯಕರು ಕುತಂತ್ರ ನಿಲ್ಲಿಸದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ಹಾಗೂ ಶೋಷಿತ ಸಮುದಾಯಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಹಿಂದುಳಿದ ವರ್ಗದ ನಾಯಕತ್ವವನ್ನು ಕೊನೆಗಾಣಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಷಡ್ಯಂತ್ರ ಮಾಡುತ್ತಿದ್ದಾರೆ. ಹಿಂದುಳಿದವರ ಧ್ವನಿ ಅಡಗಿಸಲು ಷಡ್ಯಂತ್ರ ರೂಪಿಸಿದವರೇ ಸ್ವತಃ ಕಳಂಕಿತರು. ಅವರ ಮೇಲಿನ ಆರೋಪಗಳನ್ನೂ ನಾವು ಬಯಲಿಗೆ ಎಳೆಯುತ್ತೇವೆ ಎಂದರು.

Join Whatsapp
Exit mobile version