Home ಟಾಪ್ ಸುದ್ದಿಗಳು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ 10.47 ಕೋಟಿ ರೂ. ಅನುದಾನ ನಿಗದಿ: ಲಕ್ಷ್ಮಿ ಹೆಬ್ಬಾಳ್ಕರ್

ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ 10.47 ಕೋಟಿ ರೂ. ಅನುದಾನ ನಿಗದಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: 2024-25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10.47 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.


ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಸಂತಸದ ಸಂಗತಿ ಆಗಿದೆ ಎಂದರು. ರಾಜ್ಯದಲ್ಲಿ ಸದ್ಯ 57.91 ಲಕ್ಷ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024-25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10.47 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.


ರಾಜ್ಯದಲ್ಲಿ ಅಶಕ್ತ ಮತ್ತು ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದೆ. ಸದ್ಯ 1,575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದ ನಡೆಸುತ್ತಿರುವ ವೃದ್ಧಾಶ್ರಯಗಳಲ್ಲೂ ಹಿರಿಯ ನಾಗರಿಕರಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಅವರಿಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಿಬ್ಬಂದಿಗೆ ಶೇ.50ರಷ್ಟು ಗೌರವ ಧನ ಹೆಚ್ಚಿಸಲಾಗಿದೆ ಎಂದಿದ್ದಾರೆ.

Join Whatsapp
Exit mobile version