ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಒಬಿಸಿ ಸಮುದಾಯಗಳಿಗೆ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದ್ದಾರೆ.
ನ್ಯಾಯಾಲಯದ ಹಿಂದಿನ ಆದೇಶಗಳನ್ನು ಕಿಂಚಿತ್ತೂ ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಫೆ. 1ರ ಒಳಗೆ ಒಬಿಸಿ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸಲು ಆದೇಶ ನೀಡಿ ಮುಂದಿನ ವಿಚಾರಣೆಯನ್ನು ಫೆ. 2ಕ್ಕೆ ಮುಂದೂಡಿದೆ.
ಜನವರಿ 28ರ ಒಳಗೆ ದಂಡದ ಮೊತ್ತದ ಪೈಕಿ 2 ಲಕ್ಷ ರೂಪಾಯಿಯನ್ನು ಕರ್ನಾಟಕ ಕಾನೂನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತೆ 2 ಲಕ್ಷ ರೂಪಾಯಿಯನ್ನು ಬೆಂಗಳೂರು ವಕೀಲರ ಸಂಘ ಮತ್ತು 1 ಲಕ್ಷ ರೂಪಾಯಿಯನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.