ನವದೆಹಲಿ : ಬಹು ನಿರೀಕ್ಷಿತ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನಾ, ಜ.5ರಿಂದ ಜ.7ರ ವರೆಗೆ ಅಹಮದಾಬಾದ್ ನಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹತ್ವದ ಸಭೆ ನಡೆಯಲಿದೆ ಎನ್ನಲಾಗಿದೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತುಕತೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿಯ ಹಿರಿಯ ನಾಯಕರು, ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ ಎಂದು ವರದಿಗಳು ತಿಳಿಸಿವೆ.
ನಡ್ಡಾ ಎರಡು ದಿನ ಅಹಮದಾಬಾದ್ ನಲ್ಲಿರಲಿದ್ದು, ಒಂದು ದಿನ ಈ ಸಭೆಯಲ್ಲಿ ಮತ್ತು ಒಂದು ದಿನ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ರೈತರ ಪ್ರತಿಭಟನೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.