ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ಪತ್ತೆ ಹಚ್ಚಲು 20 ತಂಡಗಳನ್ನು ರಚಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಾಂದ್ರಾದಲ್ಲಿರುವ ಸೈಫ್ ಅವರ ಮನೆಗೆ ಗುರುವಾರ ಮುಂಜಾನೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಹಲವು ಬಾರಿ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿರುವ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
‘ಸದ್ಗುರು ಶರಣ್’ ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಕಿಡಿಗೇಡಿ, ಅದೇ ವೇಳೆ ದಾಳಿ ನಡೆಸಿದ್ದು, ಬಳಿಕ ದೊಣ್ಣೆ ಹಾಗೂ ಹರಿತವಾದ ಆಯುಧದೊಂದಿಗೆ ಪರಾರಿಯಾಗುತ್ತಿರುವ ದೃಶ್ಯಗಳು ಕಟ್ಟಡದಲ್ಲಿ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.