ಬೆಂಗಳೂರು: ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್ ಯಾವುದೇ ದಾಖಲೆ ಇಲ್ಲದೇ ಅನುಮತಿ ನೀಡಿದ್ದಾರೆ. ನಾವು ಸುಮ್ಮನೆ ಕೂರಲ್ಲ, ಹೋರಾಟ ಮಾಡ್ತೀವಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಂ ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಸಲೀಂ ಅಹ್ಮದ್ ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
5 ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಅಸ್ಥಿರಗೊಳಿಸುವ ವಿಫಲ ಪ್ರಯತ್ನ ನಡೆಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು.
ಕಾಂಗ್ರೆಸ್ ಪಕ್ಷದ, ಸಚಿವರು, ಶಾಸಕರು, ಸರ್ಕಾರ ಹಾಗೂ ಇಡೀ ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಜೊತೆಗಿದೆ. ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ನಾವು ಸುಮ್ಮನೆ ಕೂರಲ್ಲ ನಾವು ಹೋರಾಟ ಮಾಡ್ತೀವಿ ಹಾಗೂ ಬಿಜೆಪಿ, ಜೆಡಿಎಸ್ ಅವಧಿಯ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಮೂಲಕ ಅವರನ್ನು ಬೆತ್ತಲೆ ಮಾಡುತ್ತೇವೆ ಎಂದು ಹೇಳಿದ್ದಾರೆ.